IND vs ENG: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭರ್ಜರಿ ಗೆಲುವು ದಾಖಲಿಸಿದ ಭಾರತ ತಂಡ.!

ಧರ್ಮಶಾಲಾದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲೂ ಟೀಮ್ ಇಂಡಿಯಾ ಜಯ ಸಾಧಿಸಿದೆ. ಈ ಮೂಲಕ ಐದು ಪಂದ್ಯಗಳ ಸರಣಿಯನ್ನು ಭಾರತ ತಂಡ 4-1 ಅಂತರದಿಂದ ಗೆದ್ದುಕೊಂಡಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ಪರ ಆರಂಭಿಕ ಆಟಗಾರ ಝಾಕ್ ಕ್ರಾಲಿ (79) ಅರ್ಧಶತಕ ಬಾರಿಸಿ ಮಿಂಚಿದ್ದರು.
ಆದರೆ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಕುಲ್ದೀಪ್ ಯಾದವ್ ಹಾಗೂ ರವಿಚಂದ್ರನ್ ಅಶ್ವಿನ್ ಸ್ಪಿನ್ ದಾಳಿಗೆ ಕ್ರೀಸ್​ ಕಚ್ಚಿ ನಿಲ್ಲಲು ಪರದಾಡಿದ ಇಂಗ್ಲೆಂಡ್ ಮೊದಲ ಇನಿಂಗ್ಸ್​ನಲ್ಲಿ 218 ರನ್​ಗಳಿಸಲಷ್ಟೇ ಶಕ್ತರಾದರು. ಟೀಮ್ ಇಂಡಿಯಾ ಪರ ಕುಲ್ದೀಪ್ ಯಾದವ್ 5 ವಿಕೆಟ್ ಕಬಳಿಸಿದರೆ, ಅಶ್ವಿನ್ 4 ವಿಕೆಟ್ ಪಡೆದರು.
ಇಂಗ್ಲೆಂಡ್ ಆಲೌಟ್ ಆದ ಬೆನ್ನಲ್ಲೇ ಇನಿಂಗ್ಸ್ ಆರಂಭಿಸಿದ ಭಾರತ ತಂಡಕ್ಕೆ ಯಶಸ್ವಿ ಜೈಸ್ವಾಲ್ ಹಾಗೂ ರೋಹಿತ್ ಶರ್ಮಾ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 104 ರನ್ ಪೇರಿಸಿ ಜೈಸ್ವಾಲ್ (57) ಔಟಾದರು. ಇನ್ನು ರೋಹಿತ್ ಶರ್ಮಾ (103) ಹಾಗೂ ಶುಭ್​ಮನ್ ಗಿಲ್ (110) ಭರ್ಜರಿ ಶತಕ ಸಿಡಿಸಿದರು.
ಆ ಬಳಿಕ ಬಂದ ದೇವದತ್ ಪಡಿಕ್ಕಲ್ (65) ಹಾಗೂ ಸರ್ಫರಾಝ್ ಖಾನ್ (56) ಅರ್ಧಶತಕ ಬಾರಿಸಿ ಮಿಂಚಿದರು. ಪರಿಣಾಮ 2ನೇ ದಿನದಾಟದ ಅಂತ್ಯಕ್ಕೆ ಟೀಮ್ ಇಂಡಿಯಾ ಸ್ಕೋರ್ 450 ರನ್​ಗಳ ಗಡಿ ದಾಟಿತು. ಮೂರನೇ ದಿನದಾಟದಲ್ಲಿ ಬ್ಯಾಟಿಂಗ್ ಮುಂದುವರೆಸಿದ ಕುಲ್ದೀಪ್ ಯಾದವ್ (30) ಹಾಗೂ ಜಸ್​ಪ್ರೀತ್ ಬುಮ್ರಾ 20 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಈ ಮೂಲಕ ಮೊದಲ ಇನಿಂಗ್ಸ್​ನಲ್ಲಿ 477 ರನ್ ಕಲೆಹಾಕಿ ಟೀಮ್ ಇಂಡಿಯಾ 259 ರನ್​ಗಳ ಮುನ್ನಡೆ ಪಡೆಯಿತು.

ದ್ವಿತೀಯ ಇನಿಂಗ್ಸ್​:

259 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡಕ್ಕೆ ಆರಂಭದಲ್ಲೇ ರವಿಚಂದ್ರನ್ ಅಶ್ವಿನ್ ಆಘಾತ ನೀಡಿದರು. ಪರಿಣಾಮ 103 ರನ್​ ಕಲೆಹಾಕುವಷ್ಟರಲ್ಲಿ ಇಂಗ್ಲೆಂಡ್ 5 ಪ್ರಮುಖ ವಿಕೆಟ್ ಕಳೆದುಕೊಂಡಿತು. ಇದಾಗ್ಯೂ ಒಂದೆಡೆ ಕ್ರೀಸ್ ಕಚ್ಚಿ ನಿಂತು ಆಡಿದ ಜೋ ರೂಟ್ (84) ಅರ್ಧಶತಕ ಬಾರಿಸಿ ಮಿಮಚಿದರು.

ಆದರೆ ಮತ್ತೊಂದೆಡೆ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದ ಇಂಗ್ಲೆಂಡ್ ತಂಡವು 195 ರನ್​ಗಳಿಗೆ ಆಲೌಟ್ ಆಗುವ ಮೂಲಕ ಇನಿಂಗ್ಸ್ ಹಾಗೂ 64 ರನ್​ಗಳಿಂದ ಸೋಲೊಪ್ಪಿಕೊಂಡಿದೆ. ಈ ಭರ್ಜರಿ ಗೆಲುವಿನ ಮೂಲಕ ಐದು ಪಂದ್ಯಗಳ ಸರಣಿಯನ್ನು ಟೀಮ್ ಇಂಡಿಯಾ 4-1 ಅಂತರದಿಂದ ಗೆದ್ದುಕೊಂಡಿದೆ. ಟೀಮ್ ಇಂಡಿಯಾ ಪರ ದ್ವಿತೀಯ ಇನಿಂಗ್ಸ್​ನಲ್ಲಿ ಅಶ್ವಿನ್ 5 ವಿಕೆಟ್ ಕಬಳಿಸಿದರೆ, ಜಸ್​ಪ್ರೀತ್ ಬುಮ್ರಾ ಮತ್ತು ಕುಲ್ದೀಪ್ ಯಾದವ್ ತಲಾ 2 ವಿಕೆಟ್ ಪಡೆದಿದ್ದಾರೆ.

News Editor

Learn More →

Leave a Reply

Your email address will not be published. Required fields are marked *