ಮಂಗಳೂರು ಕೆಆರ್ಐಡಿಎಲ್ (ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ) ವಿಭಾಗದಲ್ಲಿ ಸಚಿವರ ಹೆಸರಿನಲ್ಲೇ ಶೇ. 7ರಷ್ಟು ಕಮಿಷನ್ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಸಂಬಂಧ ಸಮಗ್ರ ತನಿಖೆ ನಡೆಸಿ 7 ದಿನಗಳ ಒಳಗೆ ವರದಿ ಸಲ್ಲಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಬಿ. ಖಂಡ್ರೆ ಆದೇಶಿಸಿದ್ದಾರೆ.


ಮಂಗಳೂರು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ (EE) ಹಾಗೂ ಕಿರಿಯ ಇಂಜಿನಿಯರ್ಗಳು (JE) ಭ್ರಷ್ಟಾಚಾರದಲ್ಲಿ ತೊಡಗಿದ್ದು, ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಪುತ್ತೂರು ಶಾಸಕ ಕೆ.ಎ. ಅಶೋಕ್ ಕುಮಾರ್ ರೈ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿದ್ದರು. ಈ ಕುರಿತು ಮಾಧ್ಯಮಗಳಲ್ಲೂ ವರದಿಗಳು ಪ್ರಕಟವಾಗಿದ್ದವು. ಈ ಬೆಳವಣಿಗೆಯ ಬೆನ್ನಲ್ಲೇ ಸಚಿವರು ಇಲಾಖೆಯ ಕಾರ್ಯದರ್ಶಿಗಳಿಗೆ ಅಧಿಕೃತ ಟಿಪ್ಪಣಿ ರವಾನಿಸಿ ಕಠಿಣ ಕ್ರಮಕ್ಕೆ ಸೂಚಿಸಿದ್ದಾರೆ.
ಪ್ರಕರಣದ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಸೂಪರಿಂಟೆಂಡೆಂಟ್ ಇಂಜಿನಿಯರ್ (SE) ದರ್ಜೆಯ ಹಿರಿಯ ಅಧಿಕಾರಿ ನೇತೃತ್ವದಲ್ಲಿ ತ್ರಿಸದಸ್ಯ ತಂಡವನ್ನು ರಚಿಸಿ ತನಿಖೆ ನಡೆಸಲು ನಿರ್ದೇಶಿಸಲಾಗಿದೆ. ಶಾಸಕರ ಆರೋಪದಲ್ಲಿ ಹುರುಳಿದೆಯೇ, ಇಂಜಿನಿಯರ್ಗಳು ಭ್ರಷ್ಟಾಚಾರ ಎಸಗಿದ್ದಾರೆಯೇ ಎಂಬುದನ್ನು ಪರಿಶೀಲಿಸಿ, ತಪ್ಪಿತಸ್ಥರ ವಿರುದ್ಧ ಕೈಗೊಳ್ಳಬೇಕಾದ ಶಿಸ್ತುಕ್ರಮದ ಶಿಫಾರಸಿನೊಂದಿಗೆ ವರದಿಯನ್ನು ಕಡತದಲ್ಲಿ ಸಲ್ಲಿಸಲು 7 ದಿನಗಳ ಗಡುವು ನೀಡಲಾಗಿದೆ.
ಉಸ್ತುವಾರಿ ಸಚಿವರು ಅಥವಾ ಇಲಾಖೆಯ ಸಚಿವರ ಹೆಸರಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಯಾವುದೇ ಸಿಬ್ಬಂದಿ, ಅಧಿಕಾರಿಗಳು ಇಲ್ಲವೇ ಇಂಜಿನಿಯರ್ಗಳು ಹಣ ವಸೂಲಿ ಮಾಡಿದರೆ ನಿರ್ದಾಕ್ಷಿಣ್ಯವಾಗಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಚಿವರು ತಮ್ಮ ಟಿಪ್ಪಣಿಯಲ್ಲಿ ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ.


