ಬೆಂಗಳೂರು: ಮದುವೆಯ ಆಮಂತ್ರಣ ಪತ್ರಿಕೆ ನೀಡಲು ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಹಿಂದಬದಿಯಿಂದ ಬಂದ ಲಾರಿ ಢಿಕ್ಕಿ ಹೊಡೆದ ಪರಿಣಾಮ ಭಾವಿ ವಧು ಸೇರಿದಂತೆ ಇಬ್ಬರು ಮಹಿಳೆಯರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಬೆಂಗಳೂರು-ಮೈಸೂರು ರಸ್ತೆಯ ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದ ಬಳಿ ಸಂಭವಿಸಿದೆ. ಸಿಂದುಶ್ರೀ (29) ಮತ್ತು ಆಕೆಯ ಅತ್ತೆಯ ಮಗಳು ವಿದ್ಯಾ (19) ಮೃತಪಟ್ಟ ದುರ್ದೈವಿಗಳು.
ಮೃತ ಸಿಂದುಶ್ರೀ ಅವರಿಗೆ ಬರುವ ಸೋಮವಾರ ಮದುವೆ ನಿಶ್ಚಯವಾಗಿತ್ತು. ಮದುವೆಗೆ ಇನ್ನು ಕೇವಲ ನಾಲ್ಕು ದಿನಗಳಷ್ಟೇ ಬಾಕಿ ಇದ್ದು, ಮನೆಯಲ್ಲಿ ಮದುವೆಯ ಸಂಭ್ರಮ ಕಳೆಗಟ್ಟಿತ್ತು. ಸಿಂದುಶ್ರೀ ಅವರು ಮದುವೆಯ ಆಮಂತ್ರಣ ಪತ್ರಿಕೆ ನೀಡಲು ಅತ್ತೆಯ ಮಗಳು ವಿದ್ಯಾ ಜೊತೆ ಸ್ಕೂಟಿಯಲ್ಲಿ ಕತ್ತಿಗುಪ್ಪೆಗೆ ತೆರಳುತ್ತಿದ್ದಾಗ ಈ ಅನಿರೀಕ್ಷಿತ ದುರಂತ ಸಂಭವಿಸಿದೆ. ಇಬ್ಬರೂ ಸ್ಕೂಟಿಯಲ್ಲಿ ಚಲಿಸುತ್ತಿದ್ದಾಗ ಹಿಂದಬದಿಯಿಂದ ವೇಗವಾಗಿ ಬಂದ ಲಾರಿ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಇಬ್ಬರೂ ರಸ್ತೆಗೆ ಬಿದ್ದಿದ್ದು, ಲಾರಿಯ ಬೃಹತ್ ಚಕ್ರಗಳು ಅವರ ಮೇಲೆ ಹರಿದ ಪರಿಣಾಮ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಅಪಘಾತ ಎಸಗಿದ ತಕ್ಷಣವೇ ಲಾರಿಯನ್ನು ರಸ್ತೆಯಲ್ಲೇ ಬಿಟ್ಟು ಚಾಲಕ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ವಿಷಯ ತಿಳಿಯುತ್ತಿದ್ದಂತೆಯೇ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ
ದಾಖಲಾಗಿದ್ದು, ಪರಾರಿಯಾಗಿರುವ ಚಾಲಕನ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ.


