ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸಚಿವ ಸಂಪುಟ ವಿಸ್ತರಣೆ ವೇಳೆ ಮಂತ್ರಿಗಿರಿ ಕೈತಪ್ಪಿದ್ದರಿಂದ ಅಸಮಾಧಾನಗೊಂಡು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಇಂಡಿ ಕ್ಷೇತ್ರದ ಹಿರಿಯ ಶಾಸಕ ಯಶವಂತರಾಯಗೌಡ ಪಾಟೀಲ್, ಕೊನೆಗೂ ತಮ್ಮ ರಾಜೀನಾಮೆಯನ್ನು ಹಿಂಪಡೆದಿದ್ದಾರೆ.

ಮಂತ್ರಿ ಸ್ಥಾನ ಸಿಗದಿದ್ದಕ್ಕೆ ತೀವ್ರವಾಗಿ ನೊಂದಿದ್ದ ಅವರು, “ರಾಜಕೀಯದಲ್ಲಿ ನಿಷ್ಠಾವಂತರು ಮತ್ತು ಪ್ರಾಮಾಣಿಕರಿಗೆ ಬೆಲೆಯಿಲ್ಲದಂತಾಗಿದೆ. ನನ್ನ ವಿರುದ್ಧ ದೊಡ್ಡ ಮಟ್ಟದ ಷಡ್ಯಂತ್ರ ನಡೆದಿದ್ದು, ಈ ವ್ಯವಸ್ಥೆಯ ರಾಜಕಾರಣವೇ ಬೇಡವಾಗಿದೆ,” ಎಂದು ಬೇಸರ ವ್ಯಕ್ತಪಡಿಸಿ ಶಾಸಕತ್ವ ತೊರೆಯುವ ನಿರ್ಧಾರ ಕೈಗೊಂಡಿದ್ದರು.
ಹೈಕಮಾಂಡ್ ಮಧ್ಯಪ್ರವೇಶ – ಮನವೊಲಿಕೆಯಲ್ಲಿ ಕೈ ನಾಯಕರು ಯಶಸ್ಸು:
ಶಾಸಕರ ರಾಜೀನಾಮೆ ಬೆನ್ನಲ್ಲೇ ಸಕ್ರಿಯರಾದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಪ್ರಮುಖ ನಾಯಕರು ಅವರೊಂದಿಗೆ ಸುದೀರ್ಘ ಮಾತುಕತೆ ನಡೆಸಿದ್ದರು. ಪ್ರಾರಂಭದಲ್ಲಿ ತಮ್ಮ ಪಟ್ಟಿನಿಂದ ಹಿಂದೆ ಸರಿಯದಿದ್ದಾಗ, ಕೊನೆಗೆ ಕಾಂಗ್ರೆಸ್ ಹೈಕಮಾಂಡ್ ನಾಯಕರೇ ಖುದ್ದಾಗಿ ದೂರವಾಣಿ ಮೂಲಕ ಕರೆ ಮಾಡಿ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹೈಕಮಾಂಡ್ ಭರವಸೆಯ ನಂತರ ಶಾಂತಗೊಂಡಿರುವ ಯಶವಂತರಾಯಗೌಡ ಪಾಟೀಲ್ ತಮ್ಮ ನಿರ್ಧಾರವನ್ನು ಬದಲಿಸಿದ್ದು, ರಾಜೀನಾಮೆಯನ್ನು ವಾಪಸ್ ಪಡೆದುಕೊಂಡಿದ್ದಾರೆ. ಅಲ್ಲದೆ, ತಮ್ಮ ರಾಜೀನಾಮೆ ಪತ್ರವನ್ನು ಅಂಗೀಕರಿಸದಂತೆ ವಿಧಾನಸಭಾ ಸ್ಪೀಕರ್ ಅವರಿಗೆ ಅಧಿಕೃತವಾಗಿ ಪತ್ರ ರವಾನಿಸುವ ಮೂಲಕ ಕ್ಷೇತ್ರದಲ್ಲಿ ಸೃಷ್ಟಿಯಾಗಿದ್ದ ರಾಜಕೀಯ ಬಿಕ್ಕಟ್ಟಿಗೆ ತೆರೆ ಎಳೆದಿದ್ದಾರೆ.


