

ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ತಪಾಸಣೆ.

ಪುತ್ತೂರು: ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರಸಭೆ ಕಚೇರಿಗೆ ಲೋಕಾಯುಕ್ತ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ಗಾನ ಅವರ ನೇತೃತ್ವದಲ್ಲಿ ಅಧಿಕಾರಿಗಳು ನಗರಸಭೆ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಕಳೆದ ಒಂದು ಗಂಟೆಯಿಂದ ವಿವಿಧ ದಾಖಲೆಗಳು ಹಾಗೂ ಕಡತಗಳನ್ನು ಲೋಕಾಯುಕ್ತ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.
ನಗರಸಭೆಯ ಮುಖ್ಯಾಧಿಕಾರಿ ವಿದ್ಯಾ ಕಾಳೆ ಸೇರಿದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಕಚೇರಿಯೊಳಗೇ ಇರಿಸಲಾಗಿದೆ. ಅಧಿಕಾರಿಗಳು ಮತ್ತು ಸಿಬ್ಬಂದಿಯ ಮೊಬೈಲ್ ಫೋನ್ಗಳನ್ನು ಪಡೆದುಕೊಂಡು ಪರಿಶೀಲನೆ ನಡೆಸಲಾಗುತ್ತಿದೆ ಎನ್ನಲಾಗಿದೆ.
ಲೋಕಾಯುಕ್ತ ಅಧಿಕಾರಿಗಳ ತಪಾಸಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಅಧಿಕಾರಿ ಅಥವಾ ಸಿಬ್ಬಂದಿಯನ್ನು ಕಚೇರಿಯಿಂದ ಹೊರಗೆ ತೆರಳಲು ಅವಕಾಶ ನೀಡಲಾಗಿಲ್ಲ.
ದಾಳಿಗೆ ಕಾರಣವಾದ ದೂರು, ಪರಿಶೀಲನೆಗೆ ಒಳಪಟ್ಟ ದಾಖಲೆಗಳು ಹಾಗೂ ಲೋಕಾಯುಕ್ತ ಅಧಿಕಾರಿಗಳ ಮುಂದಿನ ಕ್ರಮದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.


