ಮುಲ್ಕಿ ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ: ನಾಲ್ವರ ಬಂಧನ, ₹17.20 ಲಕ್ಷ ಮೌಲ್ಯದ ಚಿನ್ನಾಭರಣ, ವಾಹನ ವಶ

ಮಂಗಳೂರು: ಮುಲ್ಕಿ ಕಿಲ್ಪಾಡಿ ಗ್ರಾಮದ ಆದಿ ಕಿಲ್ಲಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳವು ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಅಂತರ ಜಿಲ್ಲಾ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳಿಂದ ಒಟ್ಟು ₹17.20 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸೆ.1ರಂದು ಮಧ್ಯರಾತ್ರಿ ದೈವಸ್ಥಾನದ ಗರ್ಭಗುಡಿಯ ಮುಖ್ಯ ದ್ವಾರದ ಬೀಗವನ್ನು ಮುರಿದು ಒಳನುಗ್ಗಿದ ಕಳ್ಳರು ಕೊರ್ದಬ್ಬು ದೈವದ ಮೂರ್ತಿಗಳು ಹಾಗೂ ಚಿನ್ನಾಭರಣಗಳನ್ನು ಕಳವು ಮಾಡಿದ್ದರು. ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ತನಿಖೆಗೆ ವಿಶೇಷ ತಂಡ ರಚಿಸಲಾಗಿತ್ತು. ಸೆ.6ರಂದು ಜಾಹೀದ್ ಸಿನಾನ್ (36) ಮತ್ತು ಯಾಸೀನ್ (36) ಅವರನ್ನು ಮುಲ್ಕಿ ಕಾರ್ನಾಡಿನಲ್ಲಿ ಬಂಧಿಸಲಾಗಿದ್ದು, ಸೆ.7ರಂದು ಮಹಮದ್ ಅಫ್ರಿದಿ (26) ಹಾಗೂ ಎಸ್.ಕೆ. ಅಬ್ದುಲ್ ಜುಮ್ಮಾನ್ (26) ಅವರನ್ನು ದಾವಣಗೆರೆಯಲ್ಲಿ ಬಂಧಿಸಲಾಗಿದೆ.

ಆರೋಪಿಗಳಿಂದ ಸುಮಾರು 4 ಕೆ.ಜಿ. 521 ಗ್ರಾಂ ಬೆಳ್ಳಿ ಹಾಗೂ 34.820 ಗ್ರಾಂ ಚಿನ್ನ ಸೇರಿದಂತೆ ₹11.20 ಲಕ್ಷ ಮೌಲ್ಯದ ಆಭರಣ ಮತ್ತು ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕೃತ್ಯಕ್ಕೆ ಬಳಸಿದ್ದ ಬೈಕ್ ಮತ್ತು ಕಾರು ಸೇರಿದಂತೆ ಸುಮಾರು ₹6 ಲಕ್ಷ ಮೌಲ್ಯದ ವಾಹನಗಳನ್ನೂ ವಶಕ್ಕೆ ಪಡೆಯಲಾಗಿದೆ.

ಆರೋಪಿಗಳ ವಿಚಾರಣೆಯಿಂದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಾಪು ಶ್ರೀ ಮಹಾಲಕ್ಷ್ಮೀ ಮಹಾಗಣಪತಿ ದೇವಸ್ಥಾನ ಹಾಗೂ ಉಡುಪಿ ಜಿಲ್ಲೆಯ ಪಡುಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯ ಇನ್ನಾ ಗ್ರಾಮದ ವ್ಯಾಘ್ರ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಡೆದಿದ್ದ ಕಳವು ಪ್ರಕರಣಗಳೂ ಪತ್ತೆಯಾಗಿವೆ.ಪ್ರಕರಣದ ಮೊದಲ ಆರೋಪಿ ಜಾಹೀದ್ ಸಿನಾನ್ ವಿರುದ್ಧ ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ದಾವಣಗೆರೆ ಹಾಗೂ ಮಂಗಳೂರು ನಗರ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಈ ಹಿಂದೆ ಒಟ್ಟು 18 ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ.

ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ಶೀಕಾಂತ್ ಕೆ. ಅವರ ನೇತೃತ್ವದಲ್ಲಿ ಸುರತ್ಕಲ್ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಪ್ರಮೋದ್ ಕುಮಾರ್, ಮುಲ್ಕಿ ಠಾಣೆಯ ಪಿಎಸ್‌ಐ ರಾಘವೇಂದ್ರ ನಾಯಕ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Star Of Kudla

Learn More →

Leave a Reply

Your email address will not be published. Required fields are marked *