ತೆಲಂಗಾಣದಲ್ಲಿ 20 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಆತ್ಮಹತ್ಯೆ ಪ್ರಕರಣ ಇದೀಗ ಕೊಲೆ ಪ್ರಕರಣವಾಗಿ ತಿರುವು ಪಡೆದುಕೊಂಡಿದೆ. ವಿದ್ಯಾರ್ಥಿನಿಯನ್ನು ಹತ್ಯೆ ಮಾಡಿ, ಬಳಿಕ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಬಿಂಬಿಸಲು ಯತ್ನಿಸಿದ ಆರೋಪದ ಮೇಲೆ ಉಪನ್ಯಾಸಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಮೃತ ವಿದ್ಯಾರ್ಥಿನಿಯನ್ನು ಧಂಡ್ರಾ ಅಕ್ಷಿತಾರಾಣಿ (20) ಎಂದು ಗುರುತಿಸಲಾಗಿದೆ. ಆರಂಭದಲ್ಲಿ ಅಕ್ಷಿತಾರಾಣಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ ತನಿಖೆ ಮುಂದುವರಿದಂತೆ ಇದು ಆತ್ಮಹತ್ಯೆಯಲ್ಲ, ಪೂರ್ವಯೋಜಿತ ಕೊಲೆ ಎಂಬುದು ಬೆಳಕಿಗೆ ಬಂದಿದೆ.
ಪೊಲೀಸರ ಪ್ರಕಾರ, ಅಕ್ಷಿತಾರಾಣಿ ನಸ್ಪೂರಿನ ಕಾಲೇಜಿನಲ್ಲಿ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದ ವೇಳೆ ಅತಿಥಿ ಉಪನ್ಯಾಸಕ ನವೀನ್ ಕುಮಾರ್ ಅವರ ಪರಿಚಯವಾಗಿತ್ತು. ಬಳಿಕ ಆಕೆ ಹೈದರಾಬಾದ್ಗೆ ಮೈನಿಂಗ್ ಎಂಜಿನಿಯರಿಂಗ್ ವ್ಯಾಸಂಗಕ್ಕಾಗಿ ತೆರಳಿದ್ದಳು. ಅಲ್ಲಿ ಅಪ್ರೆಂಟಿಸ್ಶಿಪ್ ಸಂದರ್ಭದಲ್ಲಿ ರವಿ ಕುಮಾರ್ ಎಂಬ ಯುವಕನ ಪರಿಚಯವಾಗಿತ್ತು.
ರವಿ ಕುಮಾರ್ ಜೊತೆ ಅಕ್ಷಿತಾರಾಣಿ ಸ್ನೇಹ ಬೆಳೆಸುತ್ತಿದ್ದಂತೆ ನವೀನ್ ಕುಮಾರ್ ಅಸಮಾಧಾನಗೊಂಡಿದ್ದ ಎನ್ನಲಾಗಿದೆ. ಆಕೆ ತನ್ನಿಂದ ದೂರವಾಗಿ ರವಿಗೆ ಹತ್ತಿರವಾಗುತ್ತಿರುವುದನ್ನು ಸಹಿಸಿಕೊಳ್ಳಲಾಗದೆ ಆರೋಪಿ ಈ ಕೃತ್ಯ ಎಸಗಿದ್ದಾನೆ ಎಂದು ಪೆದ್ದಪಲ್ಲಿ ಪೊಲೀಸ್ ಉಪ ಆಯುಕ್ತ ಬಿ. ರಾಮ್ ರೆಡ್ಡಿ ತಿಳಿಸಿದ್ದಾರೆ.
ಸೆಪ್ಟೆಂಬರ್ 12ರಂದು ಮನೆಗೆ ಮರಳುತ್ತಿದ್ದ ಅಕ್ಷಿತಾರಾಣಿಯನ್ನು ಎಫ್ಸಿಐ ಕ್ರಾಸ್ರೋಡ್ಸ್ ಬಳಿ ನವೀನ್ ಕುಮಾರ್ ತಡೆದು, ಬಲವಂತವಾಗಿ ಕಾರಿನಲ್ಲಿ ಕರೆದೊಯ್ದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ರವಿ ಕುಮಾರ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿ ಪತ್ರ ಬರೆಯುವಂತೆ ಒತ್ತಾಯಿಸಿದ್ದಾನೆ. ಯುವತಿ ಇದಕ್ಕೆ ಒಪ್ಪದಿದ್ದಾಗ ಆಕೆಗೆ ಬಲವಂತವಾಗಿ ಕೀಟನಾಶಕ ಕುಡಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಅಷ್ಟೇ ಅಲ್ಲದೆ, ಆಕೆಗೆ ತಕ್ಷಣ ವೈದ್ಯಕೀಯ ಚಿಕಿತ್ಸೆ ದೊರೆಯದಂತೆ ಆರೋಪಿ ಉದ್ದೇಶಪೂರ್ವಕವಾಗಿ ವಿಳಂಬ ಮಾಡಿದ್ದಾನೆ ಎನ್ನಲಾಗಿದೆ. ನಂತರ ಅಕ್ಷಿತಾರಾಣಿಯ ಮೊಬೈಲ್ನಿಂದ ಆಕೆಯ ತಂದೆಗೆ ಕರೆ ಮಾಡಿ, ತಾನೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬಂತೆ ನಂಬಿಸಲು ಪ್ರಯತ್ನಿಸಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ನಂತರ ಅಕ್ಷಿತಾರಾಣಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮರುದಿನ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಸಿಸಿಟಿವಿ ದೃಶ್ಯಗಳು, ಕಾಲ್ ಲಾಗ್, ಕಾಲ್ ರೆಕಾರ್ಡಿಂಗ್ ಸೇರಿದಂತೆ ವಿವಿಧ ತಾಂತ್ರಿಕ ಸಾಕ್ಷ್ಯಗಳನ್ನು ಪರಿಶೀಲಿಸಿದಾಗ ಪ್ರಕರಣದ ಅಸಲಿ ಸಂಗತಿ ಬಯಲಾಗಿದೆ. ಸದ್ಯ ಪೊಲೀಸರು ಆರೋಪಿ ನವೀನ್ ಕುಮಾರ್ ಹಾಗೂ ರವಿ ಕುಮಾರ್ನನ್ನು ಬಂಧಿಸಿದ್ದಾರೆ. ತನಿಖೆಯ ಭಾಗವಾಗಿ ಕಾರು ಮತ್ತು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.


