ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ:ಮಂಗಳೂರಿಗೆ ಆಗಮಿಸಿದ ಎನ್. ಶಶಿಕುಮಾರ್ ಸೇರಿದಂತೆ ತನಿಖಾ ತಂಡ

ಮಂಗಳೂರು: 2012ರ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ತಂಡ (SIT) ಗುರುವಾರ ಅಧಿಕೃತವಾಗಿ ತನಿಖೆ ಆರಂಭಿಸಿದೆ. ಎಸ್‌ಐಟಿ ಮುಖ್ಯಸ್ಥ ಐಜಿಪಿ ಎನ್. ಶಶಿಕುಮಾರ್ ಸೇರಿದಂತೆ ಅಧಿಕಾರಿಗಳು ಮಂಗಳೂರಿಗೆ ಆಗಮಿಸಿ ಸಭೆ ನಡೆಸಿದರು.

ಮಂಗಳೂರಿನ ಹಳೆಯ ಡಿಸಿ ಕಚೇರಿ ಆವರಣದಲ್ಲಿ ಸ್ಥಾಪಿಸಿರುವ ಎಸ್‌ಐಟಿ ಕಚೇರಿಯಲ್ಲಿ ಸಭೆ ನಡೆದಿದ್ದು, ಸಿಎಚ್. ಸುಧೀರ್ ಕುಮಾರ್ ರೆಡ್ಡಿ, ಡಿಐಜಿ ಹಾಗೂ ಮಂಗಳೂರು ನಗರ ಪೊಲೀಸ್ ಆಯುಕ್ತರು, ಬೆಂಗಳೂರು ಗುಪ್ತಚರ ವಿಭಾಗದ ಎಸ್‌ಪಿ ನಿಶಾ ಜೇಮ್ಸ್, ಬೆಂಗಳೂರು ಸಿಐಡಿ ಎಸ್‌ಪಿ ಲೋಕೇಶ್ ಜಗಲಾಸರ್ ಸೇರಿದಂತೆ ಹಲವು ಅಧಿಕಾರಿಗಳು ಭಾಗವಹಿಸಿದ್ದರು.

ಬೆಂಗಳೂರು ಗ್ರಾಮಾಂತರ ಹೆಚ್ಚುವರಿ ಎಸ್‌ಪಿ ವೆಂಕಟೇಶ್ ಪ್ರಸನ್ನ ಸಭೆಗೆ ಗೈರಾಗಿದ್ದು, ಅವರು ತನಿಖಾ ತಂಡದಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಸಭೆಯಲ್ಲಿ ತನಿಖೆಯ ಮುಂದಿನ ಹಂತಗಳು ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಯಿತು.

ತನಿಖೆಗಾಗಿ ಮಂಗಳೂರಿನ ಹಳೆಯ ಡಿಸಿ ಕಚೇರಿ ಕಟ್ಟಡದ ಎರಡನೇ ಮಹಡಿಯಲ್ಲಿ ಪ್ರತ್ಯೇಕ ಕಚೇರಿ ತೆರೆಯಲಾಗಿದೆ. ಬೆಳ್ತಂಗಡಿಯಲ್ಲೂ ಕಚೇರಿ ಸ್ಥಾಪಿಸಲಾಗುತ್ತಿದ್ದು, ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಸುಮಾರು 14 ವರ್ಷಗಳ ಬಳಿಕ ಈ ಬೆಳವಣಿಗೆ ನಡೆದಿದ್ದು, ಸೆಪ್ಟೆಂಬರ್ 21ರಂದು ಸುಪ್ರೀಂ ಕೋರ್ಟ್ ನೀಡಿದ ಆದೇಶದ ಹಿನ್ನೆಲೆಯಲ್ಲಿ ಎಸ್‌ಐಟಿ ರಚಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ 17 ವರ್ಷದ ಸೌಜನ್ಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಹೊಸದಾಗಿ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿತ್ತು. ಮೂರು ತಿಂಗಳೊಳಗೆ ಅನುಸರಣಾ ವರದಿ ಸಲ್ಲಿಸುವಂತೆಯೂ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.

2012ರ ಅಕ್ಟೋಬರ್ 9ರಂದು ಕಾಲೇಜಿನಿಂದ ಮನೆಗೆ ತೆರಳುತ್ತಿದ್ದ ಸೌಜನ್ಯ ನಾಪತ್ತೆಯಾಗಿದ್ದರು. ಮರುದಿನ ಧರ್ಮಸ್ಥಳದ ನೇತ್ರಾವತಿ ನದಿ ಸಮೀಪದ ಅರಣ್ಯ ಪ್ರದೇಶದಲ್ಲಿ ಆಕೆಯ ಮೃತದೇಹ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆಯಲ್ಲಿ ಲೈಂಗಿಕ ದೌರ್ಜನ್ಯ ನಡೆಸಿ ಹತ್ಯೆ ಮಾಡಿರುವುದು ದೃಢಪಟ್ಟಿತ್ತು.

ಈ ಪ್ರಕರಣವನ್ನು ಈ ಹಿಂದೆ ಸಿಐಡಿ ಹಾಗೂ ಸಿಬಿಐ ತನಿಖೆ ನಡೆಸಿದ್ದರೂ ಆರೋಪಿಯನ್ನು ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ. ಪ್ರಕರಣದ ಏಕೈಕ ಆರೋಪಿಯಾಗಿದ್ದ ಸಂತೋಷ್ ರಾವ್ ಅವರನ್ನು 2023ರ ಜೂನ್‌ನಲ್ಲಿ ವಿಚಾರಣಾ ನ್ಯಾಯಾಲಯ ಖುಲಾಸೆಗೊಳಿಸಿತ್ತು.

Star Of Kudla

Learn More →

Leave a Reply

Your email address will not be published. Required fields are marked *