ಗುರುಗ್ರಾಮ : ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾಗಿದ್ದ 22 ವರ್ಷದ ಯುವಕನಿಂದ ಅತ್ಯಾಚಾರಕ್ಕೊಳಗಾಗಿದ್ದ 15 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳು ಗುರುಗ್ರಾಮದ ಸೋಹ್ನಾದ ಸರ್ಕಾರಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಬೆಳಕಿಗೆ ಬಂದಿದೆ. ತೀವ್ರ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕುಟುಂಬಸ್ಥರು ಬಾಲಕಿಯನ್ನು ಸೋಹ್ನಾದ ಉಪವಿಭಾಗೀಯ ಆಸ್ಪತ್ರೆಗೆ ಕರೆದೊಯ್ದಾಗ ಈ ಘಟನೆ ಬಹಿರಂಗವಾಗಿದೆ.
ಆಸ್ಪತ್ರೆಯಲ್ಲಿ ಬಾಲಕಿಯನ್ನು ಪರೀಕ್ಷಿಸಿದ ವೈದ್ಯರು, ಆಕೆಗೆ ಹೆರಿಗೆ ನೋವು ಆರಂಭವಾಗಿದೆ ಎಂದು ಕುಟುಂಬಸ್ಥರಿಗೆ ತಿಳಿಸಿದ್ದಾರೆ. ಈ ವಿಷಯ ತಿಳಿದು ಪೋಷಕರು ಆಘಾತಕ್ಕೊಳಗಾಗಿದ್ದಾರೆ. ಬಾಲಕಿ ಗರ್ಭಿಣಿಯಾಗಿರುವ ವಿಚಾರ ಆಕೆಗೂ ತಿಳಿದಿರಲಿಲ್ಲ, ಪೋಷಕರಿಗೂ ಇದರ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ. ಅಲ್ಲದೆ, ಆಕೆಯ ದೇಹದಲ್ಲಿಯೂ ಗರ್ಭಧಾರಣೆಯನ್ನು ಸೂಚಿಸುವಂತಹ ಗಮನಾರ್ಹ ಬದಲಾವಣೆಗಳು ಕಂಡುಬಂದಿರಲಿಲ್ಲ ಎನ್ನಲಾಗಿದೆ.
ಕೌನ್ಸೆಲಿಂಗ್ ವೇಳೆ ಬಹಿರಂಗವಾದ ಘಟನೆ
ಆಸ್ಪತ್ರೆಯ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ತನಿಖಾ ತಂಡ ಆಸ್ಪತ್ರೆಗೆ ಭೇಟಿ ನೀಡಿ ಬಾಲಕಿ, ಆಕೆಯ ಪೋಷಕರು ಹಾಗೂ ವೈದ್ಯರಿಂದ ಹೇಳಿಕೆಗಳನ್ನು ಪಡೆದುಕೊಂಡಿದೆ.
ಕೌನ್ಸೆಲಿಂಗ್ ವೇಳೆ ಬಾಲಕಿ ನೀಡಿದ ಮಾಹಿತಿಯ ಪ್ರಕಾರ, ಸುಮಾರು ಒಂದೂವರೆ ವರ್ಷದ ಹಿಂದೆ ಇನ್ಸ್ಟಾಗ್ರಾಮ್ನಲ್ಲಿ ಯುವಕನೊಬ್ಬನ ಪರಿಚಯವಾಗಿತ್ತು. ಬಳಿಕ ಆತ ವಿವಿಧ ಸ್ಥಳಗಳಲ್ಲಿ ಭೇಟಿಯಾಗುವಂತೆ ಹೇಳಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಬಾಲಕಿ ಆರೋಪಿಸಿದ್ದಾಳೆ. ಭಯದಿಂದ ಮತ್ತು ಈ ಘಟನೆಯ ಪರಿಣಾಮಗಳ ಬಗ್ಗೆ ಅರಿವಿಲ್ಲದ ಕಾರಣ ತಾನು ನಡೆದ ವಿಷಯವನ್ನು ಪೋಷಕರಿಗೆ ತಿಳಿಸಿರಲಿಲ್ಲ ಎಂದು ಹೇಳಿದ್ದಾಳೆ.
ಆರೋಪಿಯು ಬಾಲಕಿಯೊಂದಿಗಿನ ಸಂಪರ್ಕವನ್ನು ಕಡಿದುಕೊಂಡ ಬಳಿಕ, ಆಗಸ್ಟ್ 1ರಂದು ಆಕೆ ಮನೆಯಿಂದ ಹೊರಟು ಹೋಗಿದ್ದಳು. ಪೋಷಕರು ಹಲವು ಕಡೆಗಳಲ್ಲಿ ಹುಡುಕಾಟ ನಡೆಸಿದರೂ ಆಕೆ ಪತ್ತೆಯಾಗಿರಲಿಲ್ಲ. ವಿಷಯ ಊರಿನವರಿಗೆ ಮತ್ತು ಸಂಬಂಧಿಕರಿಗೆ ತಿಳಿದರೆ ಕುಟುಂಬದ ಗೌರವಕ್ಕೆ ಧಕ್ಕೆಯಾಗಬಹುದು ಎಂಬ ಆತಂಕದಿಂದ ಪೋಷಕರು ಪೊಲೀಸರಿಗೆ ದೂರು ನೀಡಿರಲಿಲ್ಲ. ಬಳಿಕ ಬಾಲಕಿ ತಾನಾಗಿಯೇ ಮನೆಗೆ ಮರಳಿದ್ದಳು.
ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು
ಬಾಲಕಿ ನೀಡಿದ ಹೇಳಿಕೆಯ ಆಧಾರದ ಮೇಲೆ ಗುರುವಾರ ಸೋಹ್ನಾ ನಗರ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್ಐಆರ್ ದಾಖಲಿಸಲಾಗಿದೆ.
ಪ್ರಸ್ತುತ ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.


