ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ರಾಜ್ಯ ಬಿಜೆಪಿಯ ಹಲವು ಘಟಾನುಘಟಿ ನಾಯಕರು ನಾಳೆ (ನ.19) ಪುತ್ತೂರಿಗೆ ಆಗಮಿಸಲಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಬಿಜೆಪಿ ನಾಯಕರು ಆಗಮಿಸುತ್ತಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ಪುತ್ತೂರಿನ ಬಂಟರ ಭವನದಲ್ಲಿ ಬಿಜೆಪಿ ರಾಜ್ಯ ಮಾಧ್ಯಮ ಸಹ-ಸಂಚಾಲಕ ಪ್ರಶಾಂತ್ ಕೆಡೆಂಜಿ ಅವರ ವಿವಾಹ ಆರತಕ್ಷತೆ ಸಮಾರಂಭ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ, ಸಿ.ಟಿ. ರವಿ, ರವಿಕುಮಾರ್, ಸುನೀಲ್ ಕುಮಾರ್ ಹಾಗೂ ಶಾಸಕ ಜನಾರ್ದನ ರೆಡ್ಡಿ ಸೇರಿದಂತೆ ಹಲವು ಹಿರಿಯ ನಾಯಕರು ಭಾಗವಹಿಸಲಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
ಇದಲ್ಲದೆ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಬಿಜೆಪಿ ಶಾಸಕರು ಕೂಡ ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಮೂಲತಃ ಕಡಬ ತಾಲೂಕಿನ ಸವಣೂರು ಸಮೀಪದ ಕೆಡೆಂಜಿಯ ಅರಲ್ತಡಿ ನಿವಾಸಿಯಾಗಿರುವ ಪ್ರಶಾಂತ್ ಅವರು ಪ್ರಸ್ತುತ ಬೆಂಗಳೂರಿನ ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಾಧ್ಯಮ ಸಹ-ಸಂಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಒಟ್ಟಿನಲ್ಲಿ, ಖಾಸಗಿ ವಿವಾಹ ಆರತಕ್ಷತೆ ಸಮಾರಂಭದ ನೆಪದಲ್ಲಿ ರಾಜ್ಯ ಬಿಜೆಪಿಯ ಪ್ರಮುಖ ನಾಯಕರು ಪುತ್ತೂರಿನಲ್ಲಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುತ್ತಿರುವುದು ರಾಜಕೀಯ ವಲಯದ ಗಮನ ಸೆಳೆದಿದೆ.


