ಮಂಗಳೂರು: ಮತ್ತೊಂದು ಪೋಕ್ಸೊ ಪ್ರಕರಣದಲ್ಲಿ ಧರ್ಮಗುರು ಫಾ. ಸಿಪ್ರಿಯನ್ ಪಿಂಟೋ ಮತ್ತೆ ಅರೆಸ್ಟ್!!

ಮಂಗಳೂರು : ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧಿತರಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಕ್ಯಾಥೊಲಿಕ್ ಧರ್ಮಗುರು ಫಾದರ್ ಸಿಪ್ರಿಯನ್ ಪಿಂಟೊ (65) ಅವರನ್ನು ಮತ್ತೊಬ್ಬ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಮರುಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

2026ರ ಮೇ 13ರಂದು ಉಳ್ಳಾಲ ತಾಲೂಕಿನ ಪೆರ್ಮನ್ನೂರು ಗ್ರಾಮದ ಸೈಂಟ್ ಸೆಬಾಸ್ಟಿಯನ್ ಚರ್ಚ್‌ಗೆ ಪ್ರಾರ್ಥನೆ ಸಲ್ಲಿಸಲು ಬಂದಿದ್ದ 13 ವರ್ಷದ ಬಾಲಕನಿಗೆ ಫಾ. ಸಿಪ್ರಿಯನ್ ಪಿಂಟೋ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.


ಈ ದೂರಿನ ಆಧಾರದ ಮೇಲೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 75(2) (ಲೈಂಗಿಕ ಕಿರುಕುಳ) ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ (ಪೋಕ್ಸೋ) ಸೆಕ್ಷನ್ 8 ಮತ್ತು 12ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಈ ಪ್ರಕರಣದ ತನಿಖೆಯನ್ನು ಕೇಂದ್ರ ಉಪವಿಭಾಗದ ಎಸಿಪಿ ರವೀಶ್ ನಾಯಕ್ ಅವರಿಗೆ ವಹಿಸಿದ್ದಾರೆ.

ಹೊಸ ಎಫ್‌ಐಆರ್ ದಾಖಲಾದ ತಕ್ಷಣ ಆರೋಪಿಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾರಣ ಪೊಲೀಸರು ಬಂಧಿಸಿರಲಿಲ್ಲ. ಇದೀಗ ಅವರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. “ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ” ಎಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

14 ವರ್ಷದ ಬಾಲಕನ ಪ್ರಕರಣದಲ್ಲೂ ಈ ಹಿಂದೆ ಬಂಧನವಾಗಿತ್ತು:
ಮಂಗಳೂರಿನ ವಲೆನ್ಸಿಯಾ ಸೈಂಟ್ ವಿನ್ಸೆಂಟ್ ಫೆರೇರಾ ಚರ್ಚ್‌ನಲ್ಲಿ ಪಾದ್ರಿಯಾಗಿ ಸೇವೆ ಸಲ್ಲಿಸುತ್ತಿದ್ದಾಗ 14 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಅಕ್ಟೋಬರ್ 15ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪಿಂಟೋ ವಿರುದ್ಧ ಬಿಎನ್‌ಎಸ್ ಸೆಕ್ಷನ್ 75(2) ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದಲ್ಲಿ ಅಕ್ಟೋಬರ್ 18ರಂದು ಪೊಲೀಸರು ಅವರನ್ನು ಬಂಧಿಸಿದ್ದರು. ಅಕ್ಟೋಬರ್ 30ರವರೆಗೆ ನ್ಯಾಯಾಂಗ ಬಂಧನದಲ್ಲಿದ್ದ ಅವರು, ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದೀಗ ಪೆರ್ಮನ್ನೂರು ಚರ್ಚ್‌ನಲ್ಲಿ 13 ವರ್ಷದ ಬಾಲಕನಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಮತ್ತೆ ಬಂಧನಕ್ಕೊಳಗಾಗಿ ನ್ಯಾಯಾಂಗ ಬಂಧನದಲ್ಲಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Star Of Kudla

Learn More →

Leave a Reply

Your email address will not be published. Required fields are marked *