ಏಳನೇ ವೇತನ ಆಯೋಗ ವರದಿ ಸಲ್ಲಿಕೆ, ಸರ್ಕಾರಿ ನೌಕರರ ಸಂಘ ಸ್ವಾಗತ; ವರದಿಯಲ್ಲಿ ಏನಿದೆ.

ರಾಜ್ಯದ 7ನೇ ವೇತನ ಆಯೋಗವು ಇಂದು ವರದಿಯನ್ನು ಸಲ್ಲಿಸಿದ್ದು ಮೂಲ ವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ವರದಿಯನ್ನು ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಶನಿವಾರ ನಿವೃತ್ತ ಮುಖ್ಯ ಕಾರ್ಯದರ್ಶಿ, ಕೆ ಸುಧಾಕರ ರಾವ್ ಅಧ್ಯಕ್ಷತೆಯ ಏಳನೇ ವೇತನ ಆಯೋಗದ ವರದಿ ಸ್ವೀಕರಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವೇತನ ಆಯೋಗದ ಅವಧಿಯನ್ನು ಮೂರು ತಿಂಗಳು ವಿಸ್ತರಿಸಲಾಗಿತ್ತು. ಈ ಅವಧಿಯು ಮಾರ್ಚ್ 15ರಂದು ಮುಕ್ತಾಯಗೊಂಡಿದೆ. ಶುಕ್ರವಾರ ನಾನು ಮೈಸೂರಿನಲ್ಲಿದ್ದ ಕಾರಣ ವರದಿ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಅದಕ್ಕಾಗಿ ಇಂದು ವರದಿಯನ್ನು ಸ್ವೀಕರಿಸಲಾಗಿದೆ ಎಂದರು.

ವರದಿಯಲ್ಲಿ ಕನಿಷ್ಠ ಮೂಲ ವೇತನವನ್ನು 17000 ರೂ. ಗಳಿಂದ 27 ಸಾವಿರ ರೂ. ಗಳಿಗೆ ಹೆಚ್ಚಿಸುವಂತೆ ಶಿಫಾರಸು ಮಾಡಲಾಗಿದೆ. ಇದರೊಂದಿಗೆ ಇನ್ನೂ ಅನೇಕ ಶಿಫಾರಸುಗಳಿದ್ದು ವರದಿಯನ್ನು ಆರ್ಥಿಕ ಇಲಾಖೆಗೆ ನೀಡಲಾಗಿದೆ. ಆರ್ಥಿಕ ಇಲಾಖೆಯು ವರದಿಯನ್ನು ಕೂಲಂಕಷವಾಗಿ ಅಧ್ಯಯನ ಮಾಡಿದ ನಂತರ ನೀಡುವ ಸಲಹೆಗಳ ಆಧಾರದಲ್ಲಿ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಆಯೋಗದ ಸದಸ್ಯರಾದ ಪಿ ಬಿ ರಾಮಮೂರ್ತಿ, ಶ್ರೀಕಾಂತ್ ವನಹಳ್ಳಿ , ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಡಾ ಕೆ ವಿ ತ್ರಿಲೋಕಚಂದ್ರ, ಹಣಕಾಸು ಇಲಾಖೆ ಕಾರ್ಯದರ್ಶಿ ಡಾ ಪಿ ಸಿ ಜಾಫರ್, ವೇತನ ಆಯೋಗದ ಸದಸ್ಯ ಕಾರ್ಯದರ್ಶಿ ಹೆಫ್ಸಿಬಾರಾಣಿ ಕೊರ್ಲಪಾಟಿ ಉಪಸ್ಥಿತರಿದ್ದರು.
ಶನಿವಾರವೇ ಲೋಕಸಭಾ ಚುನಾವಣೆ ಘೋಷಣೆಯಾಗುತ್ತಿರುವುದರಿಂದ ನೀತಿ ಸಂಹಿತೆ ಕೂಡ ಜಾರಿಯಾಗುತ್ತಿದೆ. ಈ ಹಿನ್ನೆಲೆ ವೇತನ ಆಯೋಗದ ವರದಿ ಸದ್ಯಕ್ಕೆ ಜಾರಿಯಾಗುವುದಿಲ್ಲ. ಚುನಾವಣೆ ಬಳಿಕ ವೇತನ ಆಯೋಗದ ವರದಿಯನ್ನು ಸರ್ಕಾರ ಜಾರಿ ಮಾಡಬಹುದಾಗಿದೆ. ಆದರೆ, ಈ ವರ್ಷ ಪೂರ್ತಿ ಬೇರೆ ಬೇರೆ ಚುನಾವಣೆಗಳು ಬರುತ್ತಿರುವುದರಿಂದ ನೀತಿ ಸಂಹಿತೆಯೇ ಜಾಸ್ತಿ ಇರಲಿದೆ ಎನ್ನಲಾಗಿದೆ. ಆದ್ದರಿಂದ ಮುಂದಿನ ವರ್ಷವೇ 7ನೇ ವೇತನ ಆಯೋಗದ ವರದಿ ಜಾರಿಯಾಗಬಹುದು ಎಂದು ಹೇಳಲಾಗುತ್ತಿದೆ.

News Editor

Learn More →

Leave a Reply

Your email address will not be published. Required fields are marked *