ಮಂಗಳೂರು : ಮಂಗಳೂರು ಪೊಲೀಸರ ಮಿಂಚಿನ ಕಾರ್ಯಾಚರಣೆ : ಕೇವಲ 5 ಗಂಟೆಯಲ್ಲಿ ಚಡ್ಡಿ ಗ್ಯಾಂಗ್ ಅರೆಸ್ಟ್.

ಮಂಗಳೂರು : ಇಂದು ಬೆಳಗಿನ ಜಾವ ನಗರ ಪೊಲೀಸ್ ಕಮಿಷನರೇಟ್ ನ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಗ್ಗಿನ ಜಾವ ಸಮಯ ಸುಮಾರು 4-೦೦ ಗಂಟೆಗೆ ಬರ್ಮುಡಾ ಚಡ್ಡಿ ಮತ್ತು ಬನಿಯನ್ ಧರಿಸಿದ ಸುಮಾರು 30 ರಿಂದ 40 ವರ್ಷ ಪ್ರಾಯದ 4 ಜನ ಯುವಕರು (ಚೆಡ್ಡಿ ಗ್ಯಾಂಗ್) ದೇರೆಬೈಲು ಗ್ರಾಮದ ಕೋಟೆಕಣಿ ರಸ್ತೆಯ ಶ್ರೀ ವಿಕ್ಟರ್ ಮೆಂಡೋನ್ಸಾ ಎನ್ನುವವರ ಮನೆಯ ಕಿಟಕಿಯ ಗ್ರಿಲ್ ಅನ್ನು ತುಂಡರಿಸಿ ಒಳ ಪ್ರವೇಶಿಸಿ ವಿಕ್ಟರ್ ಮೆಂಡೋನ್ಸಾ ರವರಿಗೆ ಕಬ್ಬಿಣದ ರಾಡಿನಿಂದ ಹಲ್ಲೆ ಮಾಡಿದಲ್ಲದೆ ತೀವ್ರ ಗಾಯವನ್ನುಂಟು ಮಾಡಿ ಅವರ ಪತ್ನಿ ಶ್ರೀಮತಿ ಪ್ಯಾಟ್ರಿಸಿಯಾ ಮೆಂಡೋನ್ಸ ರವರಿಗೆ ಕೂಡಾ ಸ್ಕ್ರೂ ಡ್ರೈವರ್ ನಿಂದ ಹೊಡೆದು ಬೊಬ್ಬೆ ಹಾಕದಂತೆ ಹಾಗೂ ಫೋನ್ ಮಾಡದಂತೆ ಬೆದರಿಸಿ ಮನೆಯಲ್ಲಿದ್ದ 3 ಮೊಬೈಲ್ ಫೋನ್ ಗಳನ್ನು ನೆಲಕ್ಕೆ ಬಡಿದು ಜಖಂಗೊಳಿಸಿ ಕಪಾಟಿನ ಲಾಕರ್ ಒಳಗೆ ಇರಿಸಿದ್ದ ಸುಮಾರು 12 ಲಕ್ಷ ರೂ ಮೌಲ್ಯದ ಚಿನ್ನ ಮತ್ತು ವಜ್ರದ ಆಭರಣ, ಸ್ಯಾಮ್ ಸಂಗ್ ಮೊಬೈಲ್ ಫೋನ್ ಮತ್ತು ರೂ 1 ಲಕ್ಷ ಮೌಲ್ಯದ 10 ಬ್ರಾಂಡೆಡ್ ವಾಚ್ ಗಳು, ರೂ 3೦೦೦/- ನಗದು ಹಣವನ್ನು ಸುಲಿಗೆ ಮಾಡಿ, ಮನೆಯ ವೆರಾಂಡದಲ್ಲಿದ್ದ ಕಾರಿನ ಸಮೇತ ಪರಾರಿಯಾಗಿದ್ದರು.

ಈ ಬಗ್ಗೆ ಮಂಗಳೂರು ಪೊಲೀಸರು ಬಿರುಸಿನ ಬಲೆ ಬಿಸಿದ್ದು ಕೇವಲ 5 ಗಂಟೆಯೊಳಗೆ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳು ಮಧ್ಯಪ್ರದೇಶದ ವಿವಾಸಿಗಳಾಗಿದ್ದು ರಾಜು (24 ವರ್ಷ), ಸಿಂಗ್ವಾನಿಯ,ಮಯೂರ್ 30 ವರ್ಷ),ಬಾಲಿ (22 ವರ್ಷ),ವಿಕ್ಕಿ (21 ವರ್ಷ) ಎಂದು ತಿಳಿದುಬಂದಿದೆ.

ಪ್ರಕರಣ ನಡೆದ ಮಾಹಿತಿ ಬಂದ ಕೂಡಲೇ ಉರ್ವಾ ಠಾಣೆಯ ಪೊಲೀಸ್ ನಿರೀಕ್ಷಕರು ಹಾಗೂ ಸಿಬ್ಬಂದಿಯವರು ತಕ್ಷಣ ಕೃತ್ಯ ನಡೆದ ಸ್ಥಳಕ್ಕೆ ಭೇಟಿ ನೀಡಿ ಆರೋಪಿಗಳು ಕಾರಿನೊಂದಿಗೆ ಪರಾರಿಯಾಗಿದ್ದ ಮಾಹಿತಿಯನ್ನು ನಗರ ನಿಸ್ತಂತು ಕೊಠಡಿಗೆ ನೀಡಿದ್ದರು. ಮುಲ್ಕಿ ಬಸ್ಸು ನಿಲ್ದಾಣದ ಸಮೀಪ ನಿಲ್ಲಿಸಿದ್ದ ಕಳವು ಮಾಡಲ್ಪಟ್ಟ ಕಾರನ್ನು ಪತ್ತೆಮಾಡಿ ವಶಕ್ಕೆ ಪಡೆದು ಸ್ಥಳದ ಆಸುಪಾಸಿನಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ಕೆ.ಎಸ್.ಅರ್.ಟಿ.ಸಿ ಬಸ್ಸಿನಲ್ಲಿ ಆರೋಪಿಗಳು ಮಂಗಳೂರು ಕಡೆಗೆ ಪ್ರಯಾಣಿಸಿದ್ದು ಕಂಡು ಬಂದಿತ್ತು.

ಕೆ.ಎಸ್.ಅರ್.ಟಿ.ಸಿ ಅಧಿಕಾರಿಗಳನ್ನು ಸಂಪರ್ಕಿಸಿ, ಬೆಳಗಿನ ಜಾವ ಮುಲ್ಕಿ ಕಡೆಯಿಂದ ಮಂಗಳೂರಿಗೆ ಬಂದ ಕೆ.ಎಸ್.ಅರ್.ಟಿ.ಸಿ ಬಸ್ಸುಗಳ ಮಾಹಿತಿ ಪಡೆದು ಬಾಗಲಕೋಟೆ ಕಡೆಯಿಂದ ಮಂಗಳೂರಿಗೆ ಬಂದ ಒಂದು ಕೆ.ಎಸ್.ಅರ್.ಟಿ.ಸಿ ಬಸ್ಸಿನ ನಿರ್ವಾಹಕರು ಅವರ ಬಸ್ಸಿನಲ್ಲಿ ಮುಲ್ಕಿಯಿಂದ 4 ಜನರು ಒಟ್ಟಿಗೆ ಪ್ರಯಾಣಿಸಿದ ಮಾಹಿತಿ ತಿಳಿಸಿದ್ದರು. ಆ ವ್ಯಕ್ತಿಗಳು ಅವರಲ್ಲಿ ಬೆಂಗಳೂರಿಗೆ ಹೋಗುವ ಬಸ್ಸಿನ ಬಗ್ಗೆ ಮಾಹಿತಿ ಕೇಳಿದ್ದರು. ಕೆ.ಎಸ್.ಅರ್.ಟಿ.ಸಿ ಬಸ್ಸಿನ ನಿರ್ವಾಹಕರ ಮಾಹಿತಿಯಂತೆ ಮಂಗಳೂರಿನಿಂದ ಬೆಂಗಳೂರಿಗೆ ಹೋದ ಬಸ್ಸಿನ ಬಗ್ಗೆ ವಿವರ ಪಡೆದ ಪೊಲೀಸರು ಬಸ್ಸು ನಂಬ್ರ ಕೆಎ-19-ಎಫ್-3575 ದ ನಿರ್ವಾಹಕರನ್ನು ಸಂಪರ್ಕಿಸಿ ಅವರು ತಿಳಿಸಿದ ಮಾಹಿತಿಯಂತೆ ವಿಷಯವನ್ನು ಹಾಸನ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ತಿಳಿಸಿದ್ದಾರೆ. ಸಕಲೇಶಪುರ ಡಿವೈಎಸ್ಪಿ, ಸಿಪಿಸಿ ಹಾಗೂ ಸಿಬ್ಬಂದಿಗಳ ತಂಡ ಸಕಲೇಶಪುರ ಸಮೀಪ ಬಸ್ಸನ್ನು ತಡೆದು ನಿಲ್ಲಿಸಿ ಅದರಲ್ಲಿ ಪ್ರಯಾಣಿಸುತ್ತಿದ್ದ 4 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು ಅವರು ಕೃತ್ಯವೆಸಗಿದ ಬಗ್ಗೆ ಒಪ್ಪಿಕೊಂಡಿದ್ದಾರೆಂದು ತಿಳಿದುಬಂದಿದೆ. ಅವರನ್ನು ಮಂಗಳೂರು ನಗರದಲ್ಲಿ ಸುಲಿಗೆ ಮಾಡಿದ್ದ ಎಲ್ಲಾ ಚಿನ್ನ ಹಾಗೂ ವಜ್ರದ ಆಭರಣಗಳು, ವಾಚ್ ಗಳು ಹಾಗೂ ಹಣವನ್ನು ಅಮಾನತ್ತು ಪಡಿಸಿ ಉರ್ವಾ ಪೊಲೀಸ್ ಅಧಿಕಾರಿಗಳಿಗೆ ವಶಕ್ಕೆ ನೀಡಿದ್ದಾರೆ.

ಈ ಮಿಂಚಿನ ಕಾರ್ಯಾಚರಣೆಯನ್ನು ಕೃತ್ಯ ನಡೆದ ಕೇವಲ 5 ಗಂಟೆ ಗಳ ಒಳಗೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದು ಈ ಕಾರ್ಯಾಚರಣೆಯನ್ನು ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ಶ್ರೀ ಅನುಪಮ್ ಅಗ್ರವಾಲ್ ಐಪಿಎಸ್ ರವರ ಮಾರ್ಗದರ್ಶನದಂತೆ, ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಶ್ರೀ ಸಿದ್ದಾರ್ಥ್ ಗೋಯಲ್ ಐಪಿಎಸ್ ಹಾಗೂ ಅಪರಾಧ ವಿಭಾಗದ ಡಿಸಿಪಿ ಶ್ರೀ.ಬಿ.ಪಿ ದಿನೇಶ್ ಕುಮಾರ್ ರವರ ನಿರ್ದೇಶನದಂತೆ, ಮಂಗಳೂರು ಕೇಂದ್ರ ವಿಭಾಗದ ಎಸಿಪಿ ಶ್ರೀ ಪ್ರತಾಪ್ ಸಿಂಗ್ ತೋರಟ್, ಉರ್ವಾ ಠಾಣೆಯ ನಿರೀಕ್ಷಕರಾದ ಶ್ರೀಮತಿ ಭಾರತೀ ಜಿ. ರವರ ನೇತೃತ್ವದಲ್ಲಿ ಉರ್ವಾ ಪೊಲೀಸ್ ಠಾಣೆಯ ಎಸ್.ಐ ಹರೀಶ ಹೆಚ್.ವಿ , ಅನಿತಾ ಹೆಚ್.ಬಿ, ಎ.ಎಸ್.ಐ ವಿನಯ್ ಕುಮಾರ್, ವೇಣುಗೋಪಾಲ್ ಸಿಬ್ಬಂದಿಗಳಾದ ಪುಷ್ಪರಾಜ್, ಪ್ರಮೋದ್, ನಾರಾಯಣ, ಸತೀಶ್, ಪೀಟರ್, ರಾಮಚಂದ್ರ ವೆಂಕಟೇಶ್, ಅಭಿಷೇಕ್, ಪ್ರಜ್ವಲ್ ರವರು ಕಾರ್ಯಾಚರಣೆ ನಡೆಸಿರುತ್ತಾರೆ.

ಈ ಶೀಘ್ರ ಪತ್ತೆ ಕಾರ್ಯಕ್ಕೆ ಹಾಸನ ಜಿಲ್ಲೆಯ ಪೊಲೀಸ್ ಅಧೀಕ್ಷಕರು ಶ್ರೀಮತಿ ಮಹಮ್ಮದ್ ಸುಜೀತಾ ಐ.ಪಿ.ಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ತಮ್ಮಯ್ಯ ಎಮ್ .ಕೆ , ಸಕಲೇಶಪುರ ಉಪ ವಿಭಾಗದ ಡಿವೈಎಸ್ಪಿ ಶ್ರೀ ಪ್ರಮೋದ್ ಬಿ., ಸಕಲೇಶಪುರ ನಗರ ಪಿ.ಎಸ್.ಐ ಶ್ರೀ ಪ್ರಮೋದ್ ಕೆ.ಎಸ್ ಮತ್ತು ಗ್ರಾಮಾಂತರ ಠಾಣೆಯ ಪಿ.ಎಸ್.ಐ ಸದಾಶಿವ ತಿಪ್ಪರೆಡ್ಡಿ, ಸಿಬ್ಬಂದಿಗಳಾದ ಖಾದರ್ ಆಲಿ, ಸುನಿಲ್, ಜಗದೀಶ್, ಯೋಗಿಶ್, ಮೂಲ್ಕಿ ಪೊಲೀಸ್ ಠಾಣೆಯ ಪಿ.ಎಸ್.ಐ ಶ್ರೀ ವಿನಾಯಕ್ ಬಾವಿಕಟ್ಟೆ, ಸಿಬ್ಬಂದಿಗಳಾದ ಹರೀಶೇಖರ್ ಎ.ಎಸ್.ಐ ಕಿಶೋರ್ ಕೋಟ್ಯಾನ್ , ಚಂದ್ರಶೇಖರ್ ಹಾಗೂ ಶಶಿಧರ್ ಸಹಕರಿಸಿದ್ದಾರೆ .

News Editor

Learn More →

Leave a Reply

Your email address will not be published. Required fields are marked *